ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: 400 ಅರ್ಜಿಗಳಿಗೆ ಅನುಮೋದನೆ
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಅರ್ಜಿಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅನುಮೋದನೆ ನೀಡಿದೆ.
ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರಂತರವಾಗಿ ಸಲ್ಲಿಸಿದ್ದ ಮನವಿ ಹಾಗೂ ಹೋರಾಟದ ಫಲವಾಗಿ, ಒಂದೇ ಹಂತದಲ್ಲಿ ಇಷ್ಟೊಂದು ಸಂಖ್ಯೆಯ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಮಂಜೂರಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಸಂಘ ತಿಳಿಸಿದೆ.
ಗ್ರಾಮೀಣ ಪತ್ರಕರ್ತರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಅರ್ಜಿಗಳ ದಾಖಲೆಗಳನ್ನು ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಿದ ವಾರ್ತಾ ಇಲಾಖೆಯ ಕ್ರಮವನ್ನು ಕೆಯುಡಬ್ಲ್ಯೂಜೆ ಸ್ವಾಗತಿಸಿದ್ದು, ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ.ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಗ್ರಾಮೀಣ ಪತ್ರಕರ್ತರು ಇಲಾಖೆಯ ನಿಯಮಾವಳಿಯಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಂಘ ಮನವಿ ಮಾಡಿದೆ.
ಸಭೆಯ ಸಂದರ್ಭದಲ್ಲಿ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಅವರನ್ನು ಸನ್ಮಾನಿಸಲಾಯಿತು. ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ್ ಕಡಬೂರು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸದಸ್ಯರಾದ ಶ್ರೀನಿವಾಸ ನಾಯಕ ಇಂಡಾಜೆ, ಚಂದ್ರು, ಮೋಹನ, ಸುರೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ