ಸಿಸಿಎಸ್‌ಆರ್ ನೆರವಿನಿಂದ 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜಿಲ್ಲಾಡಳಿತ ಯೋಜನೆ
ಬಾಗಲಕೋಟೆ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸಾಮಾಜಿಕ ಹೊಣೆಗಾರಿಕೆ ನಿಧಿ (CSR) ಅಡಿ 60 ಶಾಲೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಉದ್ಯಮಗಳು ಹಾಗೂ ವಿವಿಧ ಸಂಸ್ಥೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪಾಲುದಾರರಾಗಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಶಾಲೆಗಳನ್ನು ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಶಾಲೆಗಳಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳು, ಸುಸಜ್ಜಿತ ಶೌಚಾಲಯಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ತರಗತಿಗಳು, ಡಿಜಿಟಲ್ ಕಲಿಕಾ ಸೌಲಭ್ಯ, ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಗ್ರಂಥಾಲಯ, ಆಟದ ಮೈದಾನ, ಕಾಂಪೌಂಡ್ ನಿರ್ಮಾಣ ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ. ಕೈಗಾರಿಕೆಗಳು ತಮ್ಮ CSR ಅನುದಾನದಲ್ಲಿ ಒಂದು ಅಥವಾ ಹೆಚ್ಚಿನ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೆ ಕೈಜೋಡಿಸಬಹುದು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಮಾತನಾಡಿ, ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು, ಶಾಲೆ ತೊರೆಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವುದು ಹಾಗೂ ಸಾರ್ವಜನಿಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸವನ್ನು ಬಲಪಡಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು. ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಆಧುನಿಕ ಶಿಕ್ಷಣ ಸೌಲಭ್ಯ ಒದಗಿಸಲು ಉದ್ಯಮಿಗಳ ಸಹಭಾಗಿತ್ವ ಅಗತ್ಯವೆಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಜೀತ್ ಮನ್ನಿಕೇರಿ ಯೋಜನೆಯ ವಿವರಗಳನ್ನು ಮಂಡಿಸಿ, 1ರಿಂದ 12ನೇ ತರಗತಿಯವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲೆಯ 60 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು. ಬಾದಾಮಿ–11, ಬಾಗಲಕೋಟೆ–9, ಬೀಳಗಿ–6, ಹುನಗುಂದ–14, ಜಮಖಂಡಿ–13 ಹಾಗೂ ಮುಧೋಳ–7 ಶಾಲೆಗಳು ಯೋಜನೆಗೆ ಆಯ್ಕೆಯಾಗಿವೆ ಎಂದು ಮಾಹಿತಿ ನೀಡಿದರು.
ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ಮಾತನಾಡಿ, ಕೈಗಾರಿಕೆಗಳು ಮೂರುರಿಂದ ಐದು ವರ್ಷಗಳ ಅವಧಿಗೆ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಿದರೆ ಗ್ರಾಮೀಣ ವಿದ್ಯಾರ್ಥಿಗಳಿಗೂ ನಗರ ಪ್ರದೇಶಗಳ ಮಟ್ಟದ ಶೈಕ್ಷಣಿಕ ಸೌಲಭ್ಯಗಳು ದೊರೆಯಲಿವೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಶಿಕ್ಷಣ ಇಲಾಖೆಯ ಉಪಸಮನ್ವಯಾಧಿಕಾರಿ ಪ್ರಮೋದಿನಿ, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲೆಯ 21 ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ