ಬರ ಅಧ್ಯಯನ ಮುಂದುವರಿಸಿದ ಸಚಿವರು: ಬೆಳೆ ಹಾನಿ ಪರಿಶೀಲನೆ

ಬಾಗಲಕೋಟೆ : ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಗುರುವಾರವೂ ಮುಂದುವರಿಸಿದರು. ಬಾಗಲಕೋಟೆ ತಾಲೂಕಿನ ಚಿಟಗಿನಕೊಪ್ಪ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿ ರೈತರ ಅಹವಾಲು ಆಲಿಸಿದರು.
ಚಿಟಗಿನಕೊಪ್ಪ ಗ್ರಾಮದ ರೈತ ಶೇಖರಪ್ಪ ಹಾವರಗಿ ಅವರ ಜಮೀನಿನಲ್ಲಿ ಬೆಳೆದ ತೊಗರಿ ಬೆಳೆ ಹಾಗೂ ರುಕ್ಮೀಬಾಯಿ ನಾಯಕ ಅವರ ಜಮೀನಿನ ಉಳ್ಳಾಗಡ್ಡಿ ಮತ್ತು ಸೂರ್ಯಕಾಂತಿ ಬೆಳೆಗಳನ್ನು ವೀಕ್ಷಿಸಿದ ಸಚಿವರು, ಮಳೆಯ ಅಭಾವದಿಂದ ಉಂಟಾಗಿರುವ ನಷ್ಟದ ಕುರಿತು ರೈತರಿಂದ ಮಾಹಿತಿ ಪಡೆದರು.

ನಂತರ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟಿ ಗ್ರಾಮದ ಪತ್ರಪ್ಪ ಹೊಸಕೋಟೆ ಅವರ ಜಮೀನಿನ ಹೆಸರು ಬೆಳೆ ಹಾಗೂ ಮಲ್ಲಾಪೂರ ಗ್ರಾಮದ ರೈತ ಮೌಲಾಸಾಬ ಮುಲ್ಲಾ ಅವರ ಈರುಳ್ಳಿ ಬೆಳೆ ಹಾನಿಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಮಳೆ ಕೊರತೆಯ ಸಂದರ್ಭಗಳಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಆಯ್ಕೆ, ಬಿತ್ತನೆಗೆ ಸೂಕ್ತ ಸಮಯ ಹಾಗೂ ಬೆಳೆ ವಿಮೆ ಯೋಜನೆಗಳ ಕುರಿತು ಗ್ರಾಮ ಮಟ್ಟದಲ್ಲಿಯೇ ಸಮಗ್ರ ಮಾಹಿತಿ ಮತ್ತು ತಾಂತ್ರಿಕ ಮಾರ್ಗದರ್ಶನ ನೀಡುವಂತೆ ಸೂಚಿಸಿದರು.

ತಡವಾಗಿ ತೊಗರಿ ಬಿತ್ತನೆ ಮಾಡಿದರೆ ಬೆಳೆ ವಿಮೆ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ, ರೈತರು ಬಿತ್ತನೆಗೂ ಮುನ್ನ ಕೃಷಿ ಇಲಾಖೆ ಅಧಿಕಾರಿಗಳ ಸಲಹೆ ಪಡೆಯಬೇಕು. ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬೆಳೆ ಹಾನಿಯ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ವಾಸ್ತವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಅರ್ಹ ರೈತರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಪರಿವೀಕ್ಷಣೆ ವೇಳೆ ಬಾಗಲಕೋಟೆ ಶಾಸಕ ಉಮೇಶ್ ಮೇಟಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಉಪ ವಿಭಾಗಾಧಿಕಾರಿ ಮಹೇಶಕುಮಾರ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ