ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಎಚ್.ವೈ. ಮೇಟಿ ಹೆಸರು ನಾಮಕರಣಕ್ಕೆ ಮನವಿ

ಬಾಗಲಕೋಟೆ: ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ದಿವಂಗತ ಶಾಸಕ, ಮಾಜಿ ಸಚಿವ ಎಚ್.ವೈ. ಮೇಟಿಯವರ ಹೆಸರಿಡುವಂತೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಎಸ್. ಹದ್ಲಿ ನೇತೃತ್ವದ ನಿಯೋಗವು ಸಣ್ಣ ಕೈಗಾರಿಕೆ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರಿಗೆ ಮನವಿ ಸಲ್ಲಿಸಿತು.

ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮಂಜೂರು ಮಾಡಿಸುವ ನಿಟ್ಟಿನಲ್ಲಿ ದಿವಂಗತ ಎಚ್.ವೈ. ಮೇಟಿಯವರು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿದ್ದರು. ಜಿಲ್ಲೆಯ ಗ್ರಾಮೀಣ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಬೇಕು ಮತ್ತು ಜಿಲ್ಲೆಯ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕು ಎಂಬುದು ಅವರ ಪ್ರಮುಖ ಆಶಯವಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಚರ್ಚಿಸಿ ಯೋಜನೆಗೆ ವೇಗ ನೀಡಲು ಎಚ್.ವೈ. ಮೇಟಿಯವರು ಶ್ರಮಿಸಿದ್ದರು. ಅವರ ಪ್ರಯತ್ನಗಳನ್ನು ಪರಿಗಣಿಸಿ, ಬಾಗಲಕೋಟೆಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಗೆ ‘ದಿವಂಗತ ಎಚ್.ವೈ. ಮೇಟಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಬಾಗಲಕೋಟೆ’ ಎಂದು ನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಯಿತು.

ಎಚ್.ವೈ. ಮೇಟಿಯವರು ಶಾಸಕರಾಗಿ, ಸಚಿವರಾಗಿ ಹಾಗೂ ಜನಪ್ರತಿನಿಧಿಯಾಗಿ ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಸಾರ್ವಜನಿಕ ಸೇವೆ ಮತ್ತು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯ ಕನಸು ಹಾಗೂ ಪ್ರಯತ್ನವನ್ನು ಮುಂದಿನ ಪೀಳಿಗೆಗಳು ಸ್ಮರಿಸುವಂತಾಗಲು ಅವರ ಹೆಸರನ್ನು ಸಂಸ್ಥೆಗೆ ನಾಮಕರಣ ಮಾಡುವುದು ಸೂಕ್ತ ಎಂದು ನಿಯೋಗದ ಸದಸ್ಯರು ಸಚಿವರಿಗೆ ಮನವರಿಕೆ ಮಾಡಿದರು.

ಈ ಸಂದರ್ಭದಲ್ಲಿ ಪ್ರಕಾಶ ತಪಶೆಟ್ಟಿ, ದ್ಯಾಮಣ್ಣ ಗಾಳಿ, ರಾಜು ಮನ್ನಿಕೇರಿ, ಚಂದ್ರಶೇಖರ ರಾಠೋಡ, ಹನುಮಂತ ರಾಕುಂಪಿ, ಅಕ್ಬರ ಮುಲ್ಲಾ, ಎಸ್.ಎನ್. ರಾಮಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ