ಬರ ಸ್ಥಿತಿ ಕುರಿತು ಸರ್ಕಾರಕ್ಕೆ ಶೀಘ್ರ ವರದಿ: ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟ : ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ವಾಸ್ತವ ಚಿತ್ರಣವನ್ನು ಪರಿಶೀಲಿಸಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಶೀಘ್ರದಲ್ಲೇ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಬರ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ತಾಲ್ಲೂಕುವಾರು ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಇಲಾಖೆಗಳ ನಡುವೆ ಸಮನ್ವಯ ಅತ್ಯಗತ್ಯ ಎಂದರು.
ಸಭೆಯಲ್ಲಿ ಜಿಲ್ಲೆಯಲ್ಲಿ ದಾಖಲಾಗಿರುವ ಮಳೆಯ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆ, ಮುಂಗಾರು ಹಂಗಾಮಿನ ಪ್ರಗತಿ, ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಹಾಗೂ ಕುಡಿಯುವ ನೀರು ಮತ್ತು ನೀರಾವರಿ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯ ಬೀಜ, ರಸಗೊಬ್ಬರ ಹಾಗೂ ತಾಂತ್ರಿಕ ಸಲಹೆಗಳು ಸಮಯಕ್ಕೆ ತಲುಪುವಂತೆ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಹಾಗೂ ನೀರಿನ ಮೂಲಗಳ ಸಂರಕ್ಷಣೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು. ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಮೇವು ಬ್ಯಾಂಕ್‌ಗಳ ಸಿದ್ಧತೆ ಕುರಿತು ಪಶುಸಂಗೋಪನೆ ಇಲಾಖೆ ಮಾಹಿತಿ ನೀಡಿತು. ರೈತರ ಹಿತದೃಷ್ಟಿಯಿಂದ ಜಿಲ್ಲೆಯ ಏತ ನೀರಾವರಿ ಯೋಜನೆಗಳಿಗೆ ಅಗತ್ಯ ನೀರು ಪೂರೈಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸರಾಸರಿ ಶೇ.19ರಷ್ಟು ಮಳೆ ಕೊರತೆ ದಾಖಲಾಗಿದ್ದು, ಗುಳೇದಗುಡ್ಡ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕೊರತೆ ಕಂಡುಬಂದಿದೆ ಎಂದು ತಿಳಿಸಿದರು. ಬಾಗಲಕೋಟೆ ಮತ್ತು ಬೀಳಗಿ ತಾಲ್ಲೂಕುಗಳಲ್ಲಿ ಶೇ.10 ಹಾಗೂ ಹುನಗುಂದದಲ್ಲಿ ಶೇ.5ರಷ್ಟು ಮಳೆ ಕೊರತೆ ದಾಖಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸುಮಾರು ಶೇ.90ರಷ್ಟು ಬಿತ್ತನೆ ಪೂರ್ಣಗೊಂಡಿದೆ ಎಂದರು.
ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರು, ಮೇವು ಬೀಜದ ಪೊಟ್ಟಣಗಳು ಸರಬರಾಜಾದ ಕೂಡಲೇ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಕೃಷಿ ಇಲಾಖೆ ಅಧಿಕಾರಿಗಳು, ಯೋಜನೆಯಡಿ ಮೊದಲ ಹಂತದಲ್ಲಿ 450 ಕೃಷಿ ಹೊಂಡಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಿರುವುದಾಗಿ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಉಮೇಶ್ ಮೇಟಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ