ಗ್ರಾಮಗಳ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ : ಶಾಸಕ ಉಮೇಶ್ ಮೇಟಿ
ಬೇವೂರ: ಶಿಕ್ಷಣದ ಜತೆಗೆ ಸಾಮಾಜಿಕ ಸೇವೆ, ದೇಶಪ್ರೇಮ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಗ್ರಾಮಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಉಮೇಶ್ ಮೇಟಿ ಕರೆ ನೀಡಿದರು.
ಸಮೀಪದ ಬಿಲ್ ಕೆರೂರು ಗ್ರಾಮದಲ್ಲಿ ಶುಕ್ರವಾರ ಆದರ್ಶ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ, ಬೇವೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ದತ್ತು ಗ್ರಾಮದಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಸ್ಮರಿಸಿದ ಅವರು, ಗ್ರಾಮಗಳ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಗ್ರಾಮಸ್ಥರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಸ್ವಚ್ಛತೆ, ಆರೋಗ್ಯ ಜಾಗೃತಿ ಮತ್ತು ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ದೇಶಕ್ಕಾಗಿ ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜಾತಿ, ಧರ್ಮ ಹಾಗೂ ಬಡವ–ಶ್ರೀಮಂತ ಎಂಬ ಭೇದವಿಲ್ಲದೆ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಸೇವಾ ಮನೋಭಾವ ಜೀವನದ ಭಾಗವಾಗಲಿ
ಬಿಲ್ ಕೆರೂರಿನ ಬಿಲ್ಲಾಶ್ರಮದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಂಸ್ಕಾರ, ಮಾನವೀಯತೆ ಮತ್ತು ಸೇವಾ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಯುವಜನರ ಶಕ್ತಿ ಮತ್ತು ಪ್ರತಿಭೆ ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು. ಇತರರ ಕಷ್ಟಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳು ಗುರು–ಹಿರಿಯರನ್ನು ಗೌರವಿಸಿ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕು, ಜನರ ಸಮಸ್ಯೆಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳ ಅರಿವು ಮೂಡಿಸುತ್ತವೆ. ಶಿಬಿರದಲ್ಲಿ ಕಲಿತ ಸೇವಾ ಮನೋಭಾವವನ್ನು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿ.ಜಿ. ಮಾಗನೂರ ವಹಿಸಿದ್ದರು. ರತನಕುಮಾರ್ ವೈಜಾಪುರ, ಲಕ್ಷ್ಮಣ ಅರಮನಿ, ಲೋಕನಗೌಡ ಪಾಟೀಲ, ಭೀಮಪ್ಪ ವಾಲಿಕಾರ, ನಿಂಗಣ್ಣ ಕೋಟಿ, ಸಂತೋಷ್ ಕಟಗೇರಿ, ಕೊಳ್ಳಾರ, ಎಸ್.ಎನ್. ಬಾರ್ಕಿ ಹಾಗೂ ಜೆ.ಕೆ. ಮಲ್ಲಾಪುರ ಉಪಸ್ಥಿತರಿದ್ದರು.
ಶಿಬಿರದಲ್ಲಿ ಮಹಾವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕವು ಸತತ ಮೂರನೇ ವರ್ಷವೂ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ